ಹುತ್ತರಿ ಹಾಡು

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ?
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ?
ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ?
ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ?
ಅಲ್ಲೆ ಆ ಕಡೆ ನೋಡಲಾ!
ಅಲ್ಲೆ ಕೊಡಗರ ನಾಡಲಾ!
ಅಲ್ಲೆ ಕೊಡಗರ ಬೀಡಲಾ!

ಸವಿದು ಮೆದ್ದರೊ ಯಾರು ಪೂರ್ವದಿ ಹುಲಿಯ ಹಾಲಿನ ಮೇವನು?
ಕವಣೆ ತಿರಿ ಕಲ್ಲಾಟ ಹಗ್ಗಕೆ ಸೆಳೆದರೋ ಹೆಬ್ಬಾವನು?
ಸವರಿ ಆನೆಯ ಸೊಂಡಿಲಲಿ ರಣಕೊಂಬನಾರ್‌ ಭೋರ್ಗರೆದರೋ?
ಸವೆದು ಸವೆಯದ ಸಾಹಸತ್ವದ ಕ್ಷಾತ್ರ ಬೇಟೆಯ ಮೆರೆದರೋ?
ಅವರೆ ಸೋಲ್‌ ಸಾವರಿಯರು!
ಅವರೆ ಕಡುಗಲಿ ಗರಿಯರು!
ಅವರೆ ಕೊಡಗಿನ ಹಿರಿಯರು!

ತಮ್ಮ ನಾಡಿನ ಕೊರಳು ದಾಸ್ಯದ ನೊಗದ ಭಾರಕೆ ಬಗ್ಗದೊಲ್‌,
ಹೆಮ್ಮೆಹಗೆಗಳ ಹೊಡೆದು ಹಿರಿಯರು ಹಸಿದು ಹಾರುವ ಬಗ್ಗದೊಲ್‌,
ಬೊಮ್ಮಗಿರಿಯಿ೦ ಪುಷ್ಪಗಿರಿಪರ್ಯಂತ ಬೆಳೆದೀ ದೇಶವು
ಧರ್ಮದಾನದ ಕಟ್ಟುಕಟ್ಟಳೆ ರೀತಿನೀತಿಯ ಕೋಶವು!
ನಮ್ಮ ಕೊಡಗಿದು ಜಮ್ಮದು;
ಜಮ್ಮ ಕೊಡಗಿದು ನಮ್ಮದು;
ನಮ್ಮೊಡಲ್ ಬಿಡಲಮ್ಮದು!

ಇದು ಅಗಸ್ತ್ಯನ ತಪದ ಮನೆ, ಕಾವೇರಿ ತಾಯ ತವರ್ಮನೆ
ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ!
ಇದಕೊ! ಚೆಂಗಾಳ್ವರಸರಾಡಂಬರವು ಕುಣಿದ ಶ್ರೀರಂಗವು!
ಇದೊ! ಇದೊ! ಇಲ್ಲುರುಳ್ದ ಹಾಲೇರಿಯರ ಬಲಗಿರಿಶೃಂಗವು!
ವಿಧಿಯ ಮಾಟದ ಕೊಡಗಿದು!
ಮೊದಲೆ ನಮ್ಮದು, ಕಡೆಗಿದು
ಕದಲದೆಮ್ಮನು; ಬೆಡಗಿದು!

ಒಮ್ಮತವು ಒಗ್ಗಟ್ಟು ಒಂದೇ ಮನವು ಎಲ್ಲಿದೆ ಹೇಳಿರಿ?
ಸುಮ್ಮನಿತ್ತರೊ ದಟ್ಟಿಕುಪ್ಪಸ! ಹಾಡು ಹುತ್ತರಿಗೇಳಿರಿ?
ಚಿಮ್ಮಿ ಪಾತುರೆಕೋಲ ಹೊಯ್ಲಿಗೆ ಕುಣಿವ ಪದ ಹೊರ ಹೊಮ್ಮಲಿ!
ಅಮ್ಮೆ ಹರಸಿದ ಸೀಮೆ ನಮಗಿದು ಇರಲಿ ನಮ್ಮದೆ ನಮ್ಮಲ್ಲಿ!
ನೆಮ್ಮದಿಯನಿದು ತಾಳಲಿ!
ಆಮ್ಮೆಯಾ ಬಲ ತೋಳಲಿ
ನಮ್ಮ ಕೊಡಗಿದು ಬಾಳಲಿ!
*****
(ಪದ್ಯ ಪುಸ್ತಕ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಮನಾಥನ ವರದಿ
Next post ರಾತ್ರಿಯಲ್ಲಿ ಹೆಜ್ಜೆ ಸದ್ದು

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…