ಕನ್ನಡ್ ಪದಗೊಳು

ಯೆಂಡ ಯೆಡ್ತಿ ಕನ್ನಡ್ ಪದಗೊಳ್
ಅಂದ್ರೆ ರತ್ನಂಗ್ ಪ್ರಾಣ!
ಬುಂಡೇನ್ ಎತ್ತಿ ಕುಡದ್ಬುಟ್ಟಾಂದ್ರೆ-
ತಕ್ಕೊ! ಪದಗೊಳ್ ಬಾಣ! ೧

ಬಗವಂತ್ ಏನ ಬೂಮೀಗ್ ಇಳದು
ನನ್ ತಾಕ್ ಬಂದಾಂತ್ ಅನ್ನು;
ಪರ್ ಗಿರೀಕ್ಸೆ ಮಾಡ್ತಾನ್ ಔನು-
ಬಕ್ತನ್ ಮೇಲ್ ಔನ್ ಕಣ್ಣು! ೨

‘ಯೆಂಡ ಕುಡಿಯಾದ್ ಬುಟ್ ಬುಡ್ ರತ್ನ!’
ಅಂತ್ ಔನ್ ಏನಾರ್ ಅಂದ್ರೆ-
ಮೂಗ್ ಮೂರ್ ಚೂರಾಗ್ ಮುರಸ್ಕೋಂತೀನಿ
ದೇವರ್ ಮಾತ್ಗ್ ಅಡ್ಬಂದ್ರೆ! ೩

‘ಯೆಂಡ ಬುಟ್ಟೆ. ಯೆಡ್ತೀನ್ ಬುಟ್ ಬುಡ್!’
ಅಂತ್ ಔನ್ ಏನಾರ್ ಅಂದ್ರೆ-
ಕಳದೋಯ್ತ್ ಅಂತ ಕುಣದಾಡ್ತೀನಿ
ದೊಡ್ದ್ ಒಂದ್ ಕಾಟ! ತೊಂದ್ರೆ! ೪

‘ಕನ್ನಡ್ ಪದಗೋಳ್ ಆಡೋದ್ನೆಲ್ಲ
ನಿಲ್ಲಿಸ್ ಬುಡಬೇಕ್ ರತ್ನ!’
ಅಂತ್ ಔನ್ ಅಂದ್ರೆ- ದೇವ್ರ್, ಅದ್ರ್ ಏನು!
ಮಾಡ್ತಿನ್ ಔನ್ಗೆ ಖತ್ನ! ೫

ಆಗ್ನೆ ಮಾಡೋ ಐಗೋಳ್ ಎಲ್ಲಾ
ದೇವ್ರ ಆಗ್ಲಿ-ಎಲ್ಲ!
ಕನ್ನಡ್ ಸುದ್ದಿಗ್ ಏನ್ರ ಬಂದ್ರೆ
ಮಾನಾ ಉಳಸಾಕಿಲ್ಲ! ೬

ನರಕಕ್ಕೇ ಇಳ್ಸಿ ನಾಲ್ಗೆ ಸೀಳ್ಸಿ
ಬಾಯ್ ಒಲಿಸಾಕಿದ್ರೂನೆ-
ಮೂಗ್ನಲ್ ಕನ್ನಡ್ ಪದವಾಡ್ತೀನಿ!
ನನ್ ಮನಸನ್ನ್ ನೀ ಕಾಣೆ! ೭

ಯೆಂಡ ವೋಗ್ಲಿ! ಯೆಡ್ತಿ ವೋಗ್ಲಿ!
ಎಲ್ಲಾ ಕೊಚ್ಕೊಂಡ್ ವೋಗ್ಲಿ!
ಪರ್‍ಪಂಚ್ ಇರೋ ತನಕ ಮುಂದೆ
ಕನ್ನಡ್ ಪದಗೊಳ್ ನುಗ್ಲಿ! ೮
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಷ್ಟಷಟ್ಪದಿ
Next post ತಾಯೆ ಕನ್ನಡಾಂಬೆಗೆ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…